ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಸಲ್ಲಿಕೆ

Veer Rc
By Veer Rc

ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಇದೀಗ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದದ ಹಿನ್ನೆಲೆಯಲ್ಲಿ ಸುದೀರ್ಘ ಚರ್ಚೆಗಳ ಬಳಿಕ ಇಂದು ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಪ್ರಕ್ರಿಯೆ
ವಿಶೇಷವೆಂದರೆ, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಖುದ್ದಾಗಿ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಸಾಥ್ ನೀಡಿದ ಡಿ.ಕೆ. ಶಿವಕುಮಾರ್
ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳಿದ ಸಂದರ್ಭದಲ್ಲಿ ಇಡೀ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಪ್ರಮುಖವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೊತೆಯಲ್ಲೇ ಇದ್ದು ಸಾಥ್ ನೀಡಿದರು. ಬೆಳಗ್ಗೆ ನಡೆದ ಉಪಾಹಾರ ಕೂಟದಲ್ಲಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದಾಗ ಭಾವುಕ ಸನ್ನಿವೇಶ ಸೃಷ್ಟಿಯಾಗಿತ್ತು. ಬಳಿಕ ಜಂಟಿಯಾಗಿಯೇ ರಾಜಭವನಕ್ಕೆ ಆಗಮಿಸಿದ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು.

ಮುಂದಿನ ಸಾರಥಿ ಡಿಕೆಶಿ
ಸಿದ್ದರಾಮಯ್ಯ ಅವರ ರಾಜೀನಾಮೆ ಸಲ್ಲಿಕೆಯಾಗುತ್ತಿದ್ದಂತೆಯೇ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಸಿದ್ದರಾಮಯ್ಯ ಅವರೇ ಮುಂದಿನ ನಾಯಕತ್ವಕ್ಕೆ ಶಿವಕುಮಾರ್ ಅವರ ಹೆಸರನ್ನು ಸೂಚಿಸಿದ್ದು, ನಾಳೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಅಧಿಕೃತವಾಗಿ ನೂತನ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

Share This Article