ಬೆಂಗಳೂರು, ನ. 11: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಇ-ಖಾತೆಗಳನ್ನು (e-Khata) ಸೃಷ್ಟಿಸಿ ಸರ್ಕಾರಕ್ಕೆ ವಂಚನೆ ಎಸಗಿರುವ ಆರೋಪದಡಿ ಕೆ.ಆರ್.ಪುರಂ ಕಂದಾಯ ಅಧಿಕಾರಿ (RO) ಬಸವರಾಜ ಮಾಗಿ ಸೇರಿದಂತೆ ಒಟ್ಟು 31 ಮಂದಿ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಗ್ರೇಟರ್ ಬೆಂಗಳೂರು ಆಡಳಿತ (GBA) ವಿಶೇಷ ಆಯುಕ್ತ ಮನೀಶ್ ಮೌದ್ಗಿಲ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ತನಿಖೆ ಆರಂಭಿಸಲಾಗಿದೆ.
ದೂರಿನ ಪ್ರಕಾರ, 2024ರಿಂದ 2026ರ ಅವಧಿಯಲ್ಲಿ ಬಿಬಿಎಂಪಿಯ ಇ-ಖಾತೆ ಮತ್ತು SARFAESI ಮಾಡ್ಯೂಲ್ಗಳ ದುರ್ಬಳಕೆ ಮಾಡಿಕೊಂಡು, ನಕಲಿ ದಾಖಲೆಗಳು ಹಾಗೂ ಕಾನೂನುಬಾಹಿರ ವಿಧಾನಗಳ ಮೂಲಕ ಕೆಲವು ಆಸ್ತಿಗಳಿಗೆ ಇ-ಖಾತೆಗಳನ್ನು ಸೃಷ್ಟಿಸಿ, ನಂತರ ಆ ಆಸ್ತಿಗಳ ವರ್ಗಾವಣೆ ಮತ್ತು ವ್ಯವಹಾರಗಳಿಗೆ ಅವಕಾಶ ಕಲ್ಪಿಸಿರುವ ಆರೋಪ ಕೇಳಿಬಂದಿದೆ. ಈ ಮೂಲಕ ಸರ್ಕಾರಿ ದಾಖಲೆಗಳಲ್ಲಿ ಅಕ್ರಮವಾಗಿ ಬದಲಾವಣೆ ಮಾಡಿ ಸರ್ಕಾರಕ್ಕೆ ವಂಚನೆ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಕರಣದಲ್ಲಿ ಕೆ.ಆರ್.ಪುರಂ ಕಂದಾಯ ಅಧಿಕಾರಿ ಬಸವರಾಜ ಮಾಗಿ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು ಹಾಗೂ ಫಲಾನುಭವಿಗಳನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ ಮಾಗಿಯನ್ನು ಇತ್ತೀಚೆಗೆ ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಇದೀಗ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಇತರೆ ಅನ್ವಯವಾಗುವ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದು, ಆರೋಪಿಗಳ ಪಾತ್ರದ ಬಗ್ಗೆ ಸಮಗ್ರ ತನಿಖೆ ಮುಂದುವರಿದಿದೆ.